Prahlad Joshi: ನನಗೆ ತಂಗಿ ಇಲ್ಲ, ಅವನು ನನ್ನ ತಮ್ಮನೇ ಅಲ್ಲ: ಸಚಿವ ಪ್ರಹ್ಲಾದ್ ಜೋಶಿ

0
94
Prahlad Joshi

Prahlad Joshi

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿ ಮತ್ತು ಸಹೋದರಿ ವಂಚನೆ ಮಾಡಿದ್ದಾರೆಂದು ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ವಿಷಯವನ್ನಿಟ್ಟುಕೊಂಡು ಕಾಂಗ್ರೆಸ್​ನ ಕೆಲವರು ಕೇಂದ್ರದ ಬಿಜೆಪಿ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಆರೋಪಗಳನ್ನು ಮಾಡಿದ್ದರು. ಪ್ರಹ್ಲಾದ್ ಜೋಶಿ ತಮ್ಮ ಕುಟುಂಬದವರನ್ನು ಮುಂದಿಟ್ಟುಕೊಂಡು ಹಣ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಪ್ರಹ್ಲಾದ್ ಜೋಶಿ, ‘ನನಗೆ ಸಹೋದರಿಯೇ ಇಲ್ಲ ಮತ್ತು ನನ್ನ ಸಹೋದರ ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.

‘ಮೊದಲನೆಯದಾಗಿ ನನಗೆ ಯಾರೂ ಸಹೋದರಿ ಇಲ್ಲ. ಇನ್ನು, ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು. ಆದರೆ, ಗೋಪಾಲ್ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದ ತಮ್ಮ ಸಂಪರ್ಕ, ಸಂಬಂಧವಿಲ್ಲ. ಗೋಪಾಲ್ ಜೋಶಿ ಮಾತ್ರವಲ್ಲ ಯಾರೇ ತಮ್ಮ ಕೆಲಸ ಕಾರ್ಯಗಳಿಗೆ ನನ್ನ ಹೆಸರು ದುರುಪಯೋಗ ಪಡಿಸಿಕೊಳ್ಳುತ್ತಿದ್ದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ’ ಎಂದು ಆರೋಪವನ್ನು ತಳ್ಳಿ ಹಾಕಿದರು.

‘ಯಾರೊಂದಿಗೂ ನನ್ನ ಹೆಸರು ಉಲ್ಲೇಖಿಸದಂತೆ 2013ರಲ್ಲೇ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ ತಡೆಯಾಜ್ಞೆ ನೀಡಿದೆ. ನ್ಯಾಯಾಲದ ಅಫಿಡವಿಟ್ ನಲ್ಲಿ ಅದರ ವಿವರವಿದೆ. ಬೆಂಗಳೂರಿನಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ವಿಜಯಲಕ್ಷ್ಮಿ ನನ್ನ ಸಹೋದರಿ ಎಂದು ಉಲ್ಲೇಖಿಸಿದ್ದಾರೆ. ವಾಸ್ತವವಾಗಿ ನನಗೆ ಸಹೋದರಿಯೇ ಇಲ್ಲ. ಇದನ್ನೆಲ್ಲ ನೋಡಿದರೆ ಎಲ್ಲ ಬೋಗಸ್ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ, ಉದ್ದೇಶಪೂರ್ವಕವಾಗಿ ಈ ಆರೋಪ ಮಾಡಲಾಗಿದೆಯೇ ಎಂಬ ಅನುಮಾನ ಇದೆ’ ಎಂದಿದ್ದಾರೆ ಜೋಶಿ.

HD Kumarswamy: ಕುಮಾರಸ್ವಾಮಿಯನ್ನೇ ಹಂದಿ ಎಂದ ಅಧಿಕಾರಿ, ಕೆಂಡಾಮಂಡಲವಾದ ಸಚಿವ

‘ಗೋಪಾಲ್ ಜೋಶಿ ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಿ, ಈ ಪ್ರಕರಣದಲ್ಲಿ ನನಗೂ, ನನ್ನ ಕುಟುಂಬಕ್ಕೂ ಹಾಗೂ ಬಿಜೆಪಿ ಪಕ್ಷಕ್ಕೂ ಸಹ ಸಂಬಂಧವಿಲ್ಲ. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಗೋಪಾಲ್ ಜೋಶಿ ಹಣ ಪಡೆದಿದ್ದಾರೋ ಇಲ್ಲವೋ ಗೊತ್ತಿಲ್ಲ. ಇದು ತನಿಖೆಯಿಂದ ಸಾಬೀತಾಗಬೇಕಿದೆ ಅಷ್ಟೇ ತನಿಖೆ ನಡೆದು ಸತ್ಯ ಹೊರಗೆ ಬರಲಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ’ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

‘ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಬೌದ್ಧಿಕ ದಿವಾಳಿತನ ಪ್ರದರ್ಶನ ಮಾಡುತ್ತಿದೆ, ಈ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯನ್ನು ಬಂಧಿಸಬೇಕು ಎನ್ನುತ್ತಿದೆ. ಸತ್ಯಾಸತ್ಯತೆ ವಿಮರ್ಶೆ ಮಾಡದೆ ಒಂದು ರೀತಿ ಹುಂಬತನ ಪ್ರದರ್ಶಿಸುತ್ತಿದೆ. ಆರೋಪಿಗೂ ನನಗೂ ಸಂಬಂಧವೇ ಇಲ್ಲ’ ಎಂದು ಜೋಶಿ ಲೇವಡಿ ಮಾಡಿದ್ದಾರೆ.

‘ಕಳೆದ 25 ವರ್ಷಗಳಿಂದ ರಾಜಕೀಯ ಜೀವನದಲ್ಲಿ ಇದ್ದೇನೆ. ಒಂದು ಕಾಲದಲ್ಲಿ “ಕೋಲ್ (ಕಲ್ಲಿದ್ದಲು) ಎಂದರೆ ಭ್ರಷ್ಟಾಚಾರ, ಹಗರಣವೇ ಸದ್ದು ಮಾಡುತ್ತಿತ್ತು”. ಇಂಥ ಒಂದು ಖಾತೆ ನಿರ್ವಹಿಸಿದರೂ ಸಹ ಯಾವತ್ತೂ ಕೈ ಮಸಿ ಮಾಡಿಕೊಂಡಿಲ್ಲ. ಇಂದಿಗೂ ಶುದ್ಧ ಹಸ್ತನಾಗಿದ್ದೇನೆ’ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

LEAVE A REPLY

Please enter your comment!
Please enter your name here